ಬೆಳಗಾವಿ: ‘ಡಿಸೆಂಬರ್‌ನಲ್ಲಿ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆಗೆ ಕ್ರಮ ವಹಿಸಬೇಕು. ವಸತಿ, ಸಾರಿಗೆ ಹಾಗೂ ಆಹಾರ ಸೇರಿದಂತೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಅಚ್ಚುಕಟ್ಟಾದ ವ್ಯವಸ್ಥೆಗೆ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಸೂಚಿಸಿದರು.
ಇಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಲಾಕ್‌ಡೌನ್ ಬಳಿಕ ಬಹುತೇಕ ಅತಿಥಿಗೃಹಗಳು, ಹೋಟೆಲ್ ಮತ್ತಿತರ ಕಡೆಗಳಲ್ಲಿ ಕೊಠಡಿಗಳು ಹೆಚ್ಚಿನ ಬಳಕೆ ಆಗಿರುವುದಿಲ್ಲ. ಆದ್ದರಿಂದ ಪ್ರತಿಯೊಂದನ್ನು ಪರಿಶೀಲಿಸಿ ಸ್ವಚ್ಛತೆಗೆ ಕ್ರಮ ವಹಿಸಬೇಕು. ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು’ ಎಂದು ನಿರ್ದೇಶನ ನೀಡಿದರು.‘ಸುರಕ್ಷತಾ ಕ್ರಮಗಳು, ಪಾರ್ಕಿಂಗ್ ವ್ಯವಸ್ಥೆ, ಮೊಬೈಲ್ ಹಾಗೂ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು, ತುರ್ತು ವೈದ್ಯಕೀಯ ಸೌಲಭ್ಯಗಳ ಬಗ್ಗೆಯೂ ಸಂಬಂಧಿಸಿದ ಅಧಿಕಾರಿಗಳು ಪೂರ್ವಭಾವಿ ಸಭೆಗಳನ್ನು ನಡೆಸಿ ತಯಾರಿ ಮಾಡಿಕೊಳ್ಳಬೇಕು’ ಎಂದರು.
‘ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಮಾರ್ಗಸೂಚಿ ಪಾಲಿಸುವುದರೊಂದಿಗೆ ಅಧಿವೇಶನ ನಡೆಸಬೇಕಿದೆ. ಅಗತ್ಯ ಮಾಸ್ಕ್, ಸ್ಯಾನಿಟೈಸರ್ ಒದಗಿಸುವ ಜೊತೆಗೆ ಸುರಕ್ಷಿತ ಅಂತರ ಕಾಪಾಡುವುದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ತಿಳಿಸಿದರು.
‘ಸಮಯದ ಅಭಾವದ ಜೊತೆಗೆ ವಿಧಾನಪರಿಷತ್ ಚುನಾವಣೆ ಕೂಡ ನಡೆಯುತ್ತಿರುವುದರಿಂದ ಸಾರಿಗೆ, ವಸತಿ, ಶಿಷ್ಟಾಚಾರ ಪಾಲನೆ, ಊಟೋಪಹಾರ ಮತ್ತಿತರ ಸಿದ್ಧತೆಗಳನ್ನು ತುರ್ತಾಗಿ ಮಾಡಿಕೊಳ್ಳಬೇಕು’ ಎಂದರು.
ಅಧಿವೇಶನದ ವಿಶೇಷ ಅಧಿಕಾರಿ ಡಾ.ಸುರೇಶ್ ಇಟ್ನಾಳ, ‘ಹಿಂದಿನ ಅಧಿವೇಶನದಲ್ಲಿ ಉಂಟಾಗಿರುವ ಕೆಲ ಅನಾನುಕೂಲಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗುವುದು’ ಎಂದು ತಿಳಿಸಿದರು.
ನಗರದ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್, ‘ಮಳೆಯಾಗುವ ವರದಿಗಳು ಇರುವುದರಿಂದ ಇದನ್ನು ಗಮನದಲ್ಲಿಟ್ಟುಕೊಂಡು ಸಿದ್ಧತೆ ಮಾಡಿಕೊಳ್ಳಬೇಕು. ಈ ಬಾರಿ ಪೊಲೀಸ್ ಸಿಬ್ಬಂದಿ ವಸತಿಗಾಗಿ ಪ್ರತ್ಯೇಕವಾಗಿ ತಾತ್ಕಾಲಿಕ ಟೌನ್‌ಶಿಪ್ ನಿರ್ಮಿಸಲಾಗುತ್ತಿದೆ’ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ಎಚ್.ವಿ. ದರ್ಶನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರಪ್ಪ ವಣಕ್ಯಾಳ, ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ್ ಘಾಳಿ, ಕಾಡಾ ಅಧಿಕಾರಿ ಶಶಿಧರ ಕುರೇರ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಬುಡಾ ಆಯುಕ್ತ ಪ್ರೀತಂ ನಸಲಾಪುರೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಸಿ.ಬಿ. ಕೊಡ್ಲಿ, ಲೋಕೋಪಯೋಗಿ ಇಲಾಖೆ ಇಇ ಸಂಜೀವಕುಮಾರ್ ಹುಲಕಾಯಿ ಪಾಲ್ಗೊಂಡಿದ್ದರು.