ಬೆಂಗಳೂರು: ಖಾಸಗಿ, ಸರ್ಕಾರಿ ಮತ್ತು ಅರೆ ಸರ್ಕಾರಿ ಕ್ಷೇತ್ರಗಳಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಶೇಕಡ 75ರಷ್ಟನ್ನು ಕನ್ನಡಿಗರಿಗೆ ಸಿಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ 66ನೇ ಕರ್ನಾಟಕ ರಾಜ್ಯೋತ್ಸವದ ರಾಜ್ಯಮಟ್ಟದ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯ ಔದ್ಯೋಗಿಕ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಾಗುವುದು. ಅದರ ಮೂಲಕ ಕೌಶಲ ಮತ್ತು ಅರೆ ಕೌಶಲ ವಿಭಾಗಕ್ಕೆ ಸೇರಿದ ಶೇಕಡ 75ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕನ್ನಡ ಸಿಂಧೂ ನಾಗರಿಕತೆಗೂ ಮೊದಲು ಬಳಕೆಯಲ್ಲಿದ್ದ ಭಾಷೆ. ಕನ್ನಡೇತರ ಹಲವು ರಾಜರು ರಾಜ್ಯವಾಳಿದರೂ ಕನ್ನಡಕ್ಕೆ ಯಾವ ಧಕ್ಕೆಯೂ ಆಗಿಲ್ಲ ಎಂದು ಹೇಳಿದರು.
ಕನ್ನಡವನ್ನು ಎಲ್ಲ ಆಯಾಮಗಳಲ್ಲೂ ಬಳಕೆಗೆ ತರುವ ಮೂಲಕ ಮತ್ತಷ್ಟು ಶಕ್ತಿ ತುಂಬಬೇಕಿದೆ. ಅದಕ್ಕೆ ಪೂರಕವಾಗಿ ತಾಂತ್ರಿಕ ಶಿಕ್ಷಣವನ್ನು ಕನ್ನಡದಲ್ಲಿ ಬೋಧಿಸುವ ಕೆಲಸವನ್ನು ತಮ್ಮ ಸರ್ಕಾರ ಆರಂಭಿಸಿದೆ. ಈ ವಿಚಾರದಲ್ಲಿ ಗಟ್ಟಿಯಾದ ನಿಲುವನ್ನು ಸರ್ಕಾರ ಹೊಂದಿದೆ ಎಂದರು.
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಯ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರಾಥಮಿಕ ಶಿಕ್ಷಣದಿಂದ ಸ್ನಾತಕೋತ್ತರ ಪದವಿಯವರೆಗೆ ಎಲ್ಲ ಹಂತದಲ್ಲೂ ಕನ್ನಡಕ್ಕೆ ಆದ್ಯತೆ ನೀಡಲಾಗುವುದು. ಕನ್ನಡದ ಮಕ್ಕಳಿಗೆ ಉದ್ಯೋಗದ ಭರವಸೆಯನ್ನು ನೀಡಬೇಕಿದೆ. ಆಗ ಮಾತ್ರ ಕನ್ನಡ, ಕನ್ನಡಿಗರ ಶಕ್ತಿ ಹೆಚ್ಚುತ್ತದೆ. ಅದಕ್ಕಾಗಿ ಕೈಗಾರಿಕಾ ತರಬೇತಿ ಕೇಂದ್ರಗಳು, ಪಾಲಿಟೆಕ್ನಿಕ್ ಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.
ರಾಜ್ಯದಲ್ಲಿ ಆರಂಭವಾಗುವ ಉದ್ದಿಮೆಗಳಲ್ಲಿ ಕೌಶಲ ವಲಯದ ಶೇಕಡ 75ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ನೀಡಲು ಕ್ರಮ ಕೈಗೊಳ್ಳಲಾಗುವುದು. ಆಡಳಿತದಲ್ಲಿ ಕನ್ನಡ ಬಳಕೆ ಹೆಚ್ಚಿಸಲು ಅಗತ್ಯವಿರುವ ಎಲ್ಲ ಕೆಲಸವನ್ನೂ ಮಾಡಲಾಗುವುದು. ಚಿಂತನೆ, ಯೋಜನೆ, ಅನುಷ್ಠಾನ ಎಲ್ಲವೂ ಕನ್ನಡದಲ್ಲೇ ನಡೆಯುವಂತೆ ಮಾಡುವುದು ತಮ್ಮ ಗುರಿ ಎಂದರು .
ವಿಧಾನ ಪರಿಷತ್ ಸದಸ್ಯ ದೇವೇಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಆಯುಕ್ತ ಡಾ. ವಿಶಾಲ್ ಆರ್., ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಬಿ.ಆರ್. ರವಿಕಾಂತೇಗೌಡ, ಜಿಲ್ಲಾಧಿಕಾರಿ ಜೆ. ಮಂಜುನಾಥ್ ಉಪಸ್ಥಿತರಿದ್ದರು.