Saturday, December 14, 2024
Homeಉತ್ತರ ಕರ್ನಾಟಕಬೆಳಗಾವಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ಪ್ರತಿಯೊಬ್ಬರಿಗೂ ಗೌರವಯುತ ಕಾಯಕ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ಪ್ರತಿಯೊಬ್ಬರಿಗೂ ಗೌರವಯುತ ಕಾಯಕ

Tu

ಬೆಳಗಾವಿ: ‘ರಾಜ್ಯದ ಪ್ರತಿಯೊಬ್ಬರೂ ಗೌರವಯುತ ಕಾಯಕದ ಜೊತೆಗೆ ಜೀವನ ನಡೆಸಲು ಅಗತ್ಯವಾದ ಅವಕಾಶಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ’ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜೀವನೋಪಾಯ ಅಭಿಯಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯ್ತಿ ಸಹಯೋಗದಲ್ಲಿ ನಗರದ ಸರ್ದಾರ್‌ ಪ್ರೌಢಶಾಲೆ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ಮಹಿಳಾ ಸ್ವಸಹಾಯ ಗುಂಪುಗಳ ಉತ್ಪನ್ನಗಳ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ತಲಾ ಆದಾಯದಲ್ಲಿ 3ನೇ ಸ್ಥಾನದಲ್ಲಿರುವ ರಾಜ್ಯವನ್ನು ಮೊದಲನೇ ಸ್ಥಾನಕ್ಕೆ ತರುವ ನಿಟ್ಟಿನಲ್ಲಿ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಹೆಚ್ಚಿನ ಅವಕಾಶ ಹಾಗೂ ತರಬೇತಿಗಳನ್ನು ನೀಡಲಾಗುತ್ತಿದೆ. ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸ್ವಾವಲಂಬಿಗಳನ್ನಾಗಿಸಲು ಕ್ರಮ ವಹಿಸಲಾಗಿದೆ’ ಎಂದರು.

ವಿಶೇಷ ಕಾರ್ಯಕ್ರಮ:

‘ಗ್ರಾಮೀಣ ಮಹಿಳೆಯರು ಸಾಮೂಹಿಕ ಹಾಗೂ ವೈಯಕ್ತಿಕ ಚಟುವಟಿಕೆಗಳನ್ನು ಕೌಶಲಭರಿತವಾಗಿ ಮಾಡಬೇಕಾಗಿದೆ. ಇದಕ್ಕಾಗಿ ಅಗತ್ಯ ತರಬೇತಿ ನೀಡುವ ಜೊತೆಗೆ ಉತ್ತಮ ಮಾರುಕಟ್ಟೆ ಒದಗಿಸಿ ಕೊಡಲು ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು. ಸ್ವ ಸಹಾಯ ಗುಂಪುಗಳಿಂದ ಉತ್ಪಾದಿಸುವ ಉತ್ಪನ್ನಗಳ ಮಾರಾಟದಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಕ್ಲಸ್ಟರ್‌ಗಳನ್ನು ರೂಪಿಸಲಾಗುವುದು’ ಎಂದು ಹೇಳಿದರು.

‘ಸ್ವಾತಂತ್ರೋತ್ಸವಂದು 7,500 ಸ್ತ್ರೀಶಕ್ತಿ ಸಂಘಗಳಿಗೆ ಸಣ್ಣ ಸಾಲ ನೀಡಲಾಗಿದೆ. ಇದರ ಉದ್ದೇಶ ಸಾಕಾರವಾದರೆ, ರಾಜ್ಯದ ಎಲ್ಲ ಸ್ತ್ರೀ ಶಕ್ತ ಸಂಘಗಳಿಗೂ ವಿಸ್ತರಿಸಲಾಗುವುದು’ ಎಂದು ತಿಳಿಸಿದರು.

ಕಟ್ಟಡ ನಿರ್ಮಾಣ:

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ‘ಸ್ವ ಸಹಾಯ ಸಂಘಗಳಿಂದ ತಯಾರಿಸಲಾಗುವ ಉತ್ಪನ್ನಗಳ ಮಾರಾಟಕ್ಕೆ ಪ್ರತಿ ಗ್ರಾಮ ಪಂಚಾಯ್ತಿಗಳಲ್ಲೂ ಅಗತ್ಯ ಕಟ್ಟಡ ನಿರ್ಮಾಣಕ್ಕೆ ಶೀಘ್ರವೇ ಕ್ರಮ ವಹಿಸಲಾಗುವುದು. ಅಲ್ಲದೆ ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆಯಿಂದ ಉತ್ಪಾದಿಸುವ ಉತ್ಪನ್ನಗಳನ್ನು ಇತರ ಇಲಾಖೆಗಳಿಗೆ ಮಾರಲು ಸುಲಭವಾಗುವಂತಹ ಎಲ್ಲ ಕ್ರಮಗಳನ್ನೂ ಜರುಗಿಸಲಾಗುವುದು’ ಎಂದು ಹೇಳಿದರು.

‘ಪ್ರಧಾನ ಮಂತ್ರಿ ದೀನ ದಯಾಳ್‌ ಕೌಶಲ ಅಭಿವೃದ್ಧಿ ಯೋಜನೆಯಲ್ಲಿ ಗ್ರಾಮೀಣ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ತರಬೇತಿ ನೀಡಲಾಗುತ್ತಿದೆ. ಮುಂದಿನ 4 ವರ್ಷಗಳಲ್ಲಿ ಒಂದು ಕೋಟಿ ಉದ್ಯೋಗ ಅವಕಾಶದ ಯೋಜನೆ ಜಾರಿಗೆ ತರಲಾಗುವುದು’ ಎಂದರು.

ಶಾಸಕ ಅನಿಲ ಬೆನಕೆ ಅಧ್ಯಕ್ಷತೆ ವಹಿಸಿದ್ದರು. ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ, ಪ್ರಾದೇಶಿಕ ಆಯುಕ್ತ ಆಮ್ಲಾನ್‌ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್‌, ಜಿ.ಪಂ. ಸಿಇಒ ಎಚ್‌.ವಿ. ದರ್ಶನ್‌ ಇದ್ದರು.

ಸ್ವಾತಿ ನಾಡಗೀತೆ ಹಾಡಿದರು. ರಾಷ್ಟ್ರೀಯ ಜೀವನೋಪಾಯ ಅಭಿಯಾನದ ನಿರ್ದೇಶಕಿ ಎನ್. ಮಂಜುಶ್ರೀ ಸ್ವಾಗತಿಸಿದರು.