ವಿಜಯಪುರ: ಸಂಕ್ರಾಂತಿ ವೇಳೆಗೆ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಜೊತೆಗೆ ಪಕ್ಷ ಸಂಘಟನೆಯಲ್ಲೂ ಬದಲಾವಣೆಯಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಿಯಾಗಿ ಕಾರ್ಯನಿರ್ವಹಿಸದ, ಕಚೇರಿಗೆ ಹೋಗದ ನಿಷ್ಕ್ರಿಯ ಸಚಿವರನ್ನು ಕೈಬಿಟ್ಟು, ಹೊಸಬರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ ಎಂದರು.
ಜಿಲ್ಲಾ ಕೆಡಿಪಿ ಸಭೆ ನಡೆಸದ, ಕೇವಲ ಧ್ವಜಾರೋಹಣಕ್ಕೆ ಸೀಮಿತವಾದ ಸಚಿವರನ್ನು ಕೈಬಿಡಲಿದ್ದಾರೆ. ವಿಜಯಪುರಕ್ಕೆ ಸೂಕ್ತ ಪ್ರಾತಿನಿಧ್ಯ ಸಿಗಲಿದೆ. ಹೊಸ ಜಿಲ್ಲಾ ಉಸ್ತುವಾರಿ ಸಚಿವರು ಸಿಗಲಿದ್ದಾರೆ ಎಂದರು.
ಮುಂಬರುವ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಪಕ್ಷ ಸಂಘಟನೆಯಲ್ಲೂ ಗಮನಾರ್ಹ ಬದಲಾವಣೆಯಾಗಲಿದೆ ಎಂದು ಸುಳಿವು ನೀಡಿದರು.