ಬೆಂಗಳೂರು: ‘ಉಕ್ರೇನ್ನಲ್ಲಿರುವ ಇನ್ನುಳಿದ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮಕೈಗೊಳ್ಳಲಾಗುತ್ತಿದ್ದು, ಕೇಂದ್ರ ವಿದೇಶಾಂಗ ಸಚಿವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಕೇಂದ್ರ ಹಾಗೂ ರಾಜ್ಯದ ಸಹಾಯವಾಣಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಅಲ್ಲಿರುವ ವಿದ್ಯಾರ್ಥಿಗಳ ಸುರಕ್ಷತೆಯ ಜೊತೆಗೆ ಊಟ ಮತ್ತು ನೀರು ಪೂರೈಸಲು ಕೇಂದ್ರ ವಿದೇಶಾಂಗ ಸಚಿವರನ್ನು ಮನವಿ ಮಾಡಲಾಗಿದೆ’ ಎಂದರು.
‘ಯುದ್ಧದ ಪರಿಸ್ಥಿತಿ ತಿಳಿಗೊಳ್ಳುವವರೆಗೆ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡುವ ಜೊತೆಗೆ ಅವರನ್ನು ಭಾರತಕ್ಕೆ ಕರೆತರುವ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ರಾಜ್ಯದ ಅಧಿಕಾರಿಗಳು ಈ ನಿಟ್ಟಿನಲ್ಲಿ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ’ ಎಂದೂ ತಿಳಿಸಿದರು.
‘ಹಲವು ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆಗೆ ಚರ್ಚಿಸಲಾಗಿದೆ. ಉಕ್ರೇನ್ನಲ್ಲಿ ಪ್ರಸ್ತುತ ಯುದ್ಧ ನಡೆಯುತ್ತಿರುವ ಪ್ರದೇಶದಲ್ಲಿ ಮೆಟ್ರೊ, ಬಂಕರ್ಗಳಲ್ಲಿ ಬಹಳಷ್ಟು ಜನರನ್ನು ಇರಿಸಿರುವುದು ಆತಂಕದ ವಿಷಯ’ ಎಂದರು.
‘ಉಕ್ರೇನ್ನ ಪಶ್ಚಿಮ ಭಾಗದಲ್ಲಿದ್ದ ವಿದ್ಯಾರ್ಥಿಗಳು ರೊಮೇನಿಯಾ ಮೂಲಕ ಭಾರತಕ್ಕೆ ಮರಳಿದ್ದಾರೆ. ಮುಂಬೈ ಹಾಗೂ ದೆಹಲಿಗೆ ತಲುಪಿರುವ ವಿದ್ಯಾರ್ಥಿಗಳನ್ನು ಬೆಂಗಳೂರಿಗೆ ಕರೆತರಲಾಗಿದೆ. ವಿಪತ್ತು ನಿರ್ವಹಣಾ ಇಲಾಖೆಯಿಂದಲೇ ವಿದ್ಯಾರ್ಥಿಗಳ ಪ್ರಯಾಣ ಹಾಗೂ ಇನ್ನಿತರ ವೆಚ್ಚಗಳನ್ನು ಭರಿಸಲಾಗುತ್ತಿದೆ’ ಎಂದು ತಿಳಿಸಿದರು.