ಬೆಂಗಳೂರು: ಕನ್ನಡದ ಹಿರಿಯ ಕವಿ, ನಾಟಕಕಾರ, ಪತ್ರಿಕಾ ಸಂಪಾದಕ, ಕಸಾಪ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ (ಚಂಪಾ) ಅವರು ಸೋಮವಾರ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕೋಣನಕುಂಟೆಯ ಆಸ್ಟ್ರಾ ಆಸ್ಪತ್ರೆಯಲ್ಲಿ ನಿಧನರಾದರು. ಸುಮಾರು 15 ವರ್ಷಗಳ ಹಿಂದೆ ಚಂಪಾ ಅವರು ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಅವರಿಗೆ ಪತ್ನಿ, ಒಬ್ಬ ಪುತ್ರ, ಒಬ್ಬರು ಪುತ್ರಿ ಇದ್ದಾರೆ. ಪಾರ್ಥಿವ ಶರೀರವನ್ನು ನಗರದ ಯಲಚೇನಹಳ್ಳಿಯಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು. ಅಂತ್ಯಕ್ರಿಯೆಯನ್ನು ಬೆಂಗಳೂರಿನಲ್ಲಿ ಅಥವಾ ಹಾವೇರಿ ಸಮೀಪದ ಡೊಂಬರಮತ್ತೂರಿನಲ್ಲಿ ನಡೆಸುವುದೋ ಎಂಬ ಬಗ್ಗೆ ಚರ್ಚೆ ನಡೆದಿದೆ. ಕೋವಿಡ್ ಪ್ರಕರಣಗಳ ಕಾರಣ ಅಂತ್ಯಕ್ರಿಯೆ ಸ್ಥಳದ ಬಗ್ಗೆ ಇನ್ನೂ ನಿರ್ಧಾರ ಅಂತಿಮವಾಗಿಲ್ಲ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್ 18ರಂದು ಚಂಪಾ ಜನಿಸಿದರು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ. ಚಂದ್ರಶೇಖರ ಪಾಟೀಲರು ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತಾದರು.
ಬ್ರಿಟಿಷ್ ಕೌನ್ಸಿಲ್ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್ ಸಂಸ್ಥೆಯಿಂದ ಇಂಗ್ಲಿಷ್ ಅಧ್ಯಯನದ ಡಿಪ್ಲೊಮ ಪಡೆದರು. ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಬೋಧನಾ ವೃತ್ತಿ ಆರಂಭಿಸಿದರು.
ಕೊಡೆಗಳು, ಅಪ್ಪ, ಕುಂಟ ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಗೋಕರ್ಣದ ಗೌಡಸಾನಿ, ಜಗದಂಬೆಯ ಬೀದಿನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ, ಬೇಂದ್ರೆ-ನಾ ಕಂಡಂತೆ, ನನಗೆ ಕಂಡಷ್ಟು, ೨೬ ದಿನ ೨೫ ರಾತ್ರಿ, ಕನ್ನಡ ಕನ್ನಡ ಬರ್ರಿ ನಮ್ಮ ಸಂಗಡ ಮೊದಲಾದ ಕೃತಿಗಳನ್ನು ರಚಿಸಿದ್ದಾರೆ. ‘ಸಂಕ್ರಮಣ’ ಪತ್ರಿಕೆಯ ಮೂಲಕ ಸಾಹಿತ್ಯ ಚರ್ಚೆಗೆ ಹೊಸ ದಿಕ್ಕು ತೋರಿದವರು ಚಂಪಾ. ದಲಿತ,ಬಂಡಾಯ ಸಾಹಿತ್ಯದ ಯುವ ಬರಹಗಾರರಿಗೆ ಸಂಕ್ರಮಣ ವೇದಿಕೆಯಾಗಿತ್ತು.
ನಾಡು ನುಡಿಯ ವಿಚಾರದಲ್ಲಿ ಚಂಪಾ ದಿಟ್ಟ ದನಿ. ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅವರು ಸಲ್ಲಿಸಿದ ಸೇವೆ ಅವಿಸ್ಮರಣೀಯ. 2017ರಲ್ಲಿ ಮೈಸೂರಿನಲ್ಲಿ ನಡೆದ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಅವರ ಸಾಹಿತ್ಯ ಸೇವೆಗಾಗಿ ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ (1960, 74, 76), ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ದಿನಕರ ದೇಸಾಯಿ ಪ್ರತಿಷ್ಠಾನ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೆ.ವಿ. ಶಂಕರಗೌಡ ರಂಗಭೂಮಿ ಪ್ರಶಸ್ತಿ, ಸಂದೇಶ್ ಮಾಧ್ಯಮ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳು ಅವರಿಗೆ ಸಂದಿವೆ.