ಶಿವಮೊಗ್ಗ: ಇಲ್ಲಿಂದ 15 ಕಿ.ಮೀ. ದೂರದ ಸೋಗಾನೆಯಲ್ಲಿ 450 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ಕುವೆಂಪು ವಿಮಾನ ನಿಲ್ದಾಣಕ್ಕೆ ಇಂಡಿಗೋ ಸಂಸ್ಥೆಯ ವಿಮಾನವು ಗುರುವಾರ ಬಂದಿಳಿಯುವ ಮೂಲಕ ಮಲೆನಾಡು ಭಾಗದ ಪ್ರಪ್ರಥಮ ಏರ್‍ಪೋರ್ಟ್‌ನಲ್ಲಿ ವಿಮಾನಯಾನ ಸೇವೆಗಳು ಆರಂಭವಾದವು. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಶಾಸಕ ಆರಗ ಜ್ಞಾನೇಂದ್ರ ಮುಂತಾದ ಗಣ್ಯರೊಂದಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 9.50ಕ್ಕೆ ಹೊರಟ ಚೊಚ್ಚಲ ವಿಮಾನವು 11.05ಕ್ಕೆ ಶಿವಮೊಗ್ಗಕ್ಕೆ ಬಂದಿಳಿಯುವುದರೊಂದಿಗೆ ಮಲೆನಾಡಿನಲ್ಲಿ ಹೊಸ ಅಧ್ಯಾಯ ಆರಂಭವಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ, ವಾಟರ್ ಸೆಲ್ಯೂಟ್ ಮೂಲಕ ಸಂಭ್ರಮಾಚರಣೆ ಮಾಡಲಾಯಿತು. ಜೊತೆಗೆ ಬಂದಿಳಿದ ಎಲ್ಲ ಪ್ರಯಾಣಿಕರಿಗೂ ಸಚಿವ ಮಧು ಬಂಗಾರಪ್ಪ ಅವರಲ್ಲದೆ ವಿಮಾನ ನಿಲ್ದಾಣದ ಸಿಬ್ಬಂದಿ ಗುಲಾಬಿ ಹೂವು ಮತ್ತು ಸಿಹಿ ನೀಡಿ ಸ್ವಾಗತಿಸಿದರು. ವಾಪಸ್ ಬೆಂಗಳೂರಿಗೆ ಹೊರಟ ವಿಮಾನದಲ್ಲಿ ಸಚಿವ ಎಂ.ಬಿ.ಪಾಟೀಲ ಜತೆ ಸಚಿವ ಮಧು ಬಂಗಾರಪ್ಪ ಕೂಡ ಪ್ರಯಾಣಿಸಿದರು.
ವಿಮಾನ ನಿಲ್ದಾಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಎಂ ಬಿ ಪಾಟೀಲ, “ಕರ್ನಾಟಕದ ಅಭಿವೃದ್ಧಿಯ ಯಶೋಗಾಥೆಯಲ್ಲಿ ಇದೊಂದು ವಿನೂತನ ಅಧ್ಯಾಯವಾಗಿದೆ. ರಸಋಷಿ ಕುವೆಂಪು ಅವರ ಹೆಸರನ್ನು ಹೊರಲಿರುವ ಈ ವಿಮಾನ ನಿಲ್ದಾಣದಿಂದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ. ಈ ಮೂಲಕ ಮಲೆನಾಡು ಮತ್ತು ಮಧ್ಯಮ ಕರ್ನಾಟಕದ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಹೊಸ ಮಜಲನ್ನು ಮುಟ್ಟಲಿದೆ” ಎಂದು ಬಣ್ಣಿಸಿದರು. ಜೊತೆಗೆ, ಯೋಜನೆಯ ಕನಸು ಕಂಡು, ಅದರ ಅನುಷ್ಠಾನಕ್ಕೆ ಶ್ರಮಿಸಿದ ಯಡಿಯೂರಪ್ಪ ಮತ್ತು ಉಳಿದವರ ಪ್ರಯತ್ನಗಳನ್ನು ಉಲ್ಲೇಖಿಸಿದರು. ಮುಂದಿನ ಒಂದು ವರ್ಷ ಕಾಲ ಶಿವಮೊಗ್ಗ- ಬೆಂಗಳೂರು ನಡುವೆ ಪ್ರಯಾಣಿಸುವ ಪ್ರತಿಯೊಬ್ಬರ ಟಿಕೆಟ್ ಮೇಲೆ 500 ರುಪಾಯಿ ರಾಜ್ಯ ಸರ್ಕಾರ ಸಬ್ಸಿಡಿ ನೀಡಲಿದೆ ಎಂದು ಸಚಿವರು ಘೋಷಿಸಿದರು. 779 ಎಕರೆ ವಿಸ್ತಾರದಲ್ಲಿ ನಿರ್ಮಿಸಿರುವ ವಿಮಾನ ನಿಲ್ದಾಣದಲ್ಲಿ ಮೂಲಯೋಜನೆಯ ವಿನ್ಯಾಸವನ್ನು ಪರಿಷ್ಕರಿಸಿ, ಏರ್‍ಬಸ್-320 ಮಾದರಿಯ ವಿಮಾನಗಳು ಕೂಡ ಬಂದಿಳಿಯುವ ಮತ್ತು ರಾತ್ರಿ ವೇಳೆ ಇಳಿಯುವ ಸೌಲಭ್ಯಗಳನ್ನು ಕೂಡ ಕಲ್ಪಿಸಲಾಗುತ್ತಿದೆ. ಇದರ ಕಾಮಗಾರಿ ಮುಗಿಯುತ್ತಿದ್ದಂತೆಯೇ ಶಿವಮೊಗ್ಗವನ್ನು ಭಾರತದ ಅಭಿವೃದ್ಧಿ ಕಾರಿಡಾರ್ ಜತೆ ಜೋಡಿಸಲಾಗುವುದು. ಇದಕ್ಕೆ ತಕ್ಕಂತೆ 3,050 ಮೀಟರ್ ಉದ್ದದ ರನ್‌ವೇ ನಿರ್ಮಿಸಲಾಗಿದ್ದು, 4,340 ಚದರ ಮೀಟರ್ ವಿಸ್ತೀರ್ಣದ ಪ್ರಯಾಣಿಕರ ಟರ್ಮಿನಲ್ ಹೊಂದಿದೆ ಎಂದು ಅವರು ವಿವರಿಸಿದರು. ಸದ್ಯಕ್ಕೆ ಇಲ್ಲಿಂದ ಬೆಂಗಳೂರಿಗೆ ಕನೆಕ್ಟಿಂಗ್ ವಿಮಾನಯಾನ ಸೇವೆ ಲಭ್ಯವಾಗಲಿದೆ. ಬೆಂಗಳೂರನ್ನು ಕೇವಲ 60 ನಿಮಿಷಗಳಲ್ಲಿ ತಲುಪಿ, ಅಲ್ಲಿಂದ ಚೆನ್ನೈ, ಮುಂಬೈ ಮತ್ತು ದೆಹಲಿಗೆ ತೆರಳಲಿರುವ ಇಂಡಿಗೋ ಸಂಸ್ಥೆಯ ವಿಮಾನಗಳ ಮೂಲಕ ಪ್ರಯಾಣವನ್ನು ಮುಂದುವರಿಸಬಹುದು. ಉಡಾನ್ ಯೋಜನೆಯಡಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಸದ್ಯದಲ್ಲೇ ಅಧಿಕೃತ ವಾಗಿ ಪ್ರಕಟಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ದೆಹಲಿ, ಹೈದರಾಬಾದ್ ಸೇರಿದಂತೆ ದೇಶದ ನಾನಾ ನಗರಗಳಿಗೆ ಇಲ್ಲಿಂದ ನೇರ ವಿಮಾನಯಾನ ಆರಂಭಿಸಲಾಗುವುದು ಎಂದು ಅವರು ನುಡಿದರು. ಮಲೆನಾಡಿನ ಕೇಂದ್ರಸ್ಥಾನವಾದ ಶಿವಮೊಗ್ಗದಲ್ಲಿ ವಿಮಾನಯಾನ ಸೇವೆ ಲಭ್ಯವಾಗಬೇಕೆಂಬುದು ದಶಕಗಳ ಕನಸಾಗಿತ್ತು. ವಿಮಾನಸೇವೆಗೆ ಜನರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮುಂದಿನ ಮೂರು ವಾರಗಳ ಟಿಕೆಟ್ ಈಗಾಗಲೇ ಬುಕಿಂಗ್ ಆಗಿದೆ. ಇಲ್ಲಿಂದ ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯನ್ನು ಕೇವಲ ಐದು ಗಂಟೆಗಳಲ್ಲಿ ತಲುಪಬಹುದು. ಆರ್ಥಿಕತೆಯ ಬೆಳವಣಿಗೆಗೆ ತಕ್ಕಂತೆ ನಮ್ಮ ಮೂಲಸೌಕರ್ಯ ಮತ್ತು ಅಭಿವೃದ್ಧಿ ಪರಿಕಲ್ಪನೆಗಳು ಕೂಡ ಬದಲಾಗುತ್ತಿರುತ್ತವೆ ಎಂದು ಸಚಿವರು ಹೇಳಿದರು.