ಉಡುಪಿ: ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಪಡುಗಿರಿಯ ರಸ್ತೆಗೆ ನಾಥೂರಾಮ್ ಗೋಡ್ಸೆ ನಾಮಫಲಕ ಹಾಕಲಾಗಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.
ವಿಷಯ ತಿಳಿದ ಕೂಡಲೇ ಯುವ ಕಾಂಗ್ರೆಸ್ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ನಾಮಫಲಕ ತೆರವಿಗೆ ಒತ್ತಾಯಿಸಿ, ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಕ್ರೋಶ ವ್ಯಕ್ತಪಡಿಸಿದರು. ಬೋಳ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಕಾರ್ಕಳ ಪೊಲೀಸರು ನಾಮಫಲಕ ತೆರವುಗೊಳಿಸಿದರು.
ಘಟನೆ ಸಂಬಂಧ ಜಿಲ್ಲಾ ಪಂಚಾಯಿತಿ ಸಿಇಒ ಎಚ್.ಪ್ರಸನ್ನ ‘ಬೋಳ ಗ್ರಾಮ ಪಂಚಾಯಿತಿಯ ಗಮನಕ್ಕೆ ಬಾರದಂತೆ ಕೆಲವರು ಪಡುಗಿರಿ ರಸ್ತೆಗೆ ನಾಥೂರಾಮ್ ಗೋಡ್ಸೆ ನಾಮಫಲಕ ಹಾಕಿದ್ದು, ವಿಷಯ ತಿಳಿದ ಕೂಡಲೇ ತೆರವುಗೊಳಿಸಲಾಗಿದೆ. ಕಾರ್ಕಳ ಕಾರ್ಯ ನಿರ್ವಾಹಕ ಅಧಿಕಾರಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ. ಫಲಕ ಹಾಕಿದವರ ವಿರುದ್ಧ ಪ್ರಕರಣ ದಾಖಲಿಸುವಂತೆಯೂ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು