Saturday, December 14, 2024
Homeಮಧ್ಯ ಕರ್ನಾಟಕದಾವಣಗೆರೆರಾಷ್ಟ್ರೀಯ ಶಿಕ್ಷಣ ನೀತಿ ಹಠಾತ್ ಹೇರಿಕೆ ವಿರೋಧಿಸಿ ಎಐಡಿಎಸ್‌ಒ ಪ್ರತಿಭಟನೆ

ರಾಷ್ಟ್ರೀಯ ಶಿಕ್ಷಣ ನೀತಿ ಹಠಾತ್ ಹೇರಿಕೆ ವಿರೋಧಿಸಿ ಎಐಡಿಎಸ್‌ಒ ಪ್ರತಿಭಟನೆ

ದಾವಣಗೆರೆ: ರಾಷ್ಟ್ರೀಯ ಶಿಕ್ಷಣ ನೀತಿ ಹಠಾತ್ ಹೇರಿಕೆ ಖಂಡಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎಐಡಿಎಸ್‌ಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ ಸಂಘಟನೆಯ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ರಾಜ್ಯದ ಶಿಕ್ಷಣ ತಜ್ಞರು, ಉಪನ್ಯಾಸಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ವ್ಯಾಪಕ ವಿರೋಧದ ನಡುವೆ, ತರಾತುರಿಯಲ್ಲಿ ಎನ್ಇಪಿ ಜಾರಿಗೊಳಿಸಿರುವುದನ್ನು ಖಂಡಿಸಿದರು.

ರಾಜ್ಯದ ಶಿಕ್ಷಣ ತಜ್ಞರು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ವ್ಯಾಪಕ ವಿರೋಧದ ನಡುವೆ ರಾಜ್ಯ ಸರ್ಕಾರ ಈ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ -2020 ಅನ್ನು ಅನುಷ್ಟಾನಗೊಳಿಸಿದೆ. ಈ ಆತುರದ ಹೇರಿಕೆಯು ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಂಟಕ ತರಲಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಸ್ತುತ ಶೈಕ್ಷಣಿಕ ವರ್ಷದಿಂದ ನಾಲ್ಕು ವರ್ಷದ ಪದವಿ ಕೋರ್ಸ್ ತರಗತಿಗಳು ಆರಂಭವಾಗಿ ಒಂದೆರಡು ವಾರಗಳಲ್ಲಿ ಮೊದಲ ಆಂತರಿಕ ಪರೀಕ್ಷೆಗಳು ನಡೆಯುತ್ತಿವೆ. ಆದರೆ, ಇದುವರೆಗೂ ಪಠ್ಯಕ್ರಮ ತಯಾರಾಗಿಲ್ಲ. ಬೋಧಕರ ಮತ್ತು ಪಾಠ ಮಾಡಲು ಸಾಮಗ್ರಿಗಳ ಕೊರತೆ ಇದೆ. ತರಗತಿಗಳ ಕೊರತೆಯಿಂದಾಗಿ 2 ತಿಂಗಳುಗಳಿಂದ ಯಾವುದೇ ಸಮಗ್ರ ರೀತಿಯ ಅಧ್ಯಾಯಗಳು ಯಾವ ವಿಭಾಗದಲ್ಲೂ ನಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಯಾವುದೇ ನೂತನ ಶಿಕ್ಷಣ ನೀತಿ ಜಾರಿ ಆದಾಗ ಅದರ ಆಧಾರದ ಮೇಲೆ ಶಿಕ್ಷಣ ತಜ್ಞರು, ಉಪನ್ಯಾಸಕರೊಂದಿಗೆ ಸಮಾಲೋಚನೆ ನಡೆಸಿ, ಪಠ್ಯಕ್ರಮ ತಯಾರಿಸುವ ಪ್ರಕ್ರಿಯೆಗೆ ಒಂದೆರಡು ವರ್ಷಗಳು ಬೇಕಾಗುತ್ತದೆ. ಆದರೆ, ರಾಜ್ಯ ಸರ್ಕಾರ ಯಾವುದೇ ಪೂರ್ವ ತಯಾರಿ ಇಲ್ಲದೆ ಜಾರಿ ಮಾಡಿದೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಎಂ. ಕಿರಣ, ಪೂಜಾ ನಂದಿಹಳ್ಳಿ, ಪುಷ್ಪಾ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.