ಮೈಸೂರು: ಸಂಗೀತ ನಿರ್ದೇಶಕ ಹಂಸಲೇಖ ಅವರ ಹೇಳಿಕೆ ಬೆಂಬಲಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಮಾನಸ ಗಂಗೋತ್ರಿಯಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಹಂಸಲೇಖ ವಿರುದ್ಧ ಪ್ರತಿಭಟಿಸುತ್ತಿರುವುದು, ಅವರ ವಿರುದ್ಧ ದೂರು ದಾಖಲಿಸುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು. ಅವರ ವಿರುದ್ಧ ದೂರು ದಾಖಲಿಸಿರುವುದನ್ನು ವಾಪಸ್ ಪಡೆಯಬೇಕು. ಎಲ್ಲರಿಗೂ ಮುಕ್ತವಾಗಿ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಗುರುವಾರ ಹಂಸಲೇಖ ವಿರುದ್ಧವಾಗಿ ಜಿಲ್ಲಾ ಬ್ರಾಹ್ಮಣ ಸಂಘ, ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ, ಶ್ರೀ ಕೃಷ್ಣ ಮಿತ್ರ ಮಂಡಳಿ, ಶ್ರೀಕೃಷ್ಣ ಟ್ರಸ್ಟ್, ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದರು. ಶುಕ್ರವಾರವೂ ಪ್ರತಿಭಟನೆಗಳು ಮುಂದುವರಿದಿವೆ.