ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ‘ನೇಮಕಾತಿಗೆ ಶೀಘ್ರದಲ್ಲಿ ಅಧಿಸೂಚನೆ ಹೊರಡಿಸಲಾಗುವುದು’ ಎಂದಿದ್ದಾರೆ.
‘ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರರ (6ರಿಂದ 8) 10 ಸಾವಿರ ಮತ್ತು ಕಲ್ಯಾಣ ಕರ್ನಾಟಕ ವೃಂದದ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು’ ಎಂದಿದ್ದಾರೆ.
‘ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 23 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ ಇನ್ನೂ 4 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಕೂಡಾ ನಿರ್ಧರಿಸಲಾಗಿದೆ’ ಎಂದೂ ಅವರು ತಿಳಿಸಿದ್ದಾರೆ.