ಮೈಸೂರು: ಸರ್ಕಾರಿ ಕೋಟಾದಡಿಯ ಎಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶಾತಿ ಶುಲ್ಕ ಏರಿಕೆ ಖಂಡಿಸಿ ವಿದ್ಯಾರ್ಥಿಗಳು ಇಲ್ಲಿನ ರಾಮಸ್ವಾಮಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಸೇರಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಬಡ ಮತ್ತು ಮಧ್ಯಮ ವರ್ಗದವರು ಈಗಾಗಲೇ ಕೋವಿಡ್ನಿಂದ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ವೇತನ ಕಡಿತ, ಉದ್ಯೋಗ ನಷ್ಟ ಸೇರಿದಂತೆ ಹಲವು ಕ್ರಮಗಳಿಂದ ಜೀವನ ನಡೆಸುವುದೇ ದುಸ್ತರವಾಗಿದೆ. ಈ ಹೊತ್ತಿನಲ್ಲಿ ಶುಲ್ಕ ಏರಿಕೆ ಮಾಡುವ ಮೂಲಕ ಬಡ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಕೋರ್ಸ್ ಪ್ರವೇಶಾತಿಯಿಂದ ದೂರ ಉಳಿಯುವಂತೆ ಮಾಡಿದೆ ಎಂದು ಕಿಡಿಕಾರಿದರು.
ಸರ್ಕಾರ ಕೂಡಲೇ ಏರಿಕೆ ಮಾಡಿರುವ ಶುಲ್ಕವನ್ನು ಇಳಿಕೆ ಮಾಡಬೇಕು. ಬಡ ವಿದ್ಯಾರ್ಥಿಗಳ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.