ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಶಾಸಕರುಗಳ ಸಮ್ಮುಖದಲ್ಲಿ ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಕೆ.ಸಿ ವ್ಯಾಲಿ, ಹೆಚ್. ಎನ್ ವ್ಯಾಲಿಯಲ್ಲಿ ಎರಡನೇ ಹಂತದ ಸಂಸ್ಕರಿಸಿದ ನೀರನ್ನ ಹರಿಸಲಾಗುತ್ತಿದೆ. ಈ ನೀರಿನ ಮೂರನೇ ಹಂತದ ಸಂಸ್ಕರಣೆ ಆ ಭಾಗದ ಜನರ ಹಾಗೂ ಜನಪ್ರತಿನಿಧಿಗಳ ಆಶಯವಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚನೆ ನಡೆಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳ ಸಲಹೆಯ ಹಿನ್ನಲೆಯಲ್ಲಿ, ಸಭೆಯನ್ನು ಆಯೋಜಿಸುವುದಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು* ಭರವಸೆ ನೀಡಿದರು.
ಹೆಚ್.ಎನ್. ವ್ಯಾಲಿ ಏತ ನೀರಾವರಿ ಯೋಜನೆಯ ಅಡಿಯಲ್ಲಿ ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 65 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಎರಡನೇ ಹಂತದಲ್ಲಿ ಬಾಗೇಪಲ್ಲಿ ತಾಲ್ಲೂಕಿನ 24 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಪ್ರಗತಿಯಲ್ಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಏತ ನೀರಾವರಿ ಕಾಮಗಾರಿ ಪ್ರಗತಿಯಲ್ಲಿದ್ದು, ಕೊನೆಯ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತಿದೆ. 38 ಕೆರೆಗಳಿಗೆ ನೀರು ತುಂಬಿಸುವ ಈ ಯೋಜನೆಯ ಮೊದಲ ಹಂತ ಶೀಘ್ರ ಪೂರ್ಣಗೊಳಿಸಬೇಕು. ಈ ಕಾಮಗಾರಿ ಪೂರ್ಣಗೊಳಿಸುವಲ್ಲಿ ವಿಳಂಬವಾಗುತ್ತಿದೆ. ತೀವ್ರಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಲ ಎನ್.ಎಸ್. ಭೋಸರಾಜು ತಿಳಿಸಿದರು.
ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 243 ಎಂ.ಎಲ್.ಡಿ ನೀರನ್ನು ಮೊದಲನೇ ಹಂತದಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಯ 70 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯ ಟೆಂಡರ್ ಆಗಿದೆ. ಸರ್ವೇ ಕಾರ್ಯ ಮುಗಿದಿದ್ದು, ವಿನ್ಯಾಸ ತಯಾರಿಕಾ ಕಾರ್ಯ ಪ್ರಗತಿಯಲ್ಲಿದೆ. ಈ ಕಾಮಗಾರಿಯ ಪ್ರಾರಂಭಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆ.ಸಿ.ವ್ಯಾಲಿ ಏತ ನೀರಾವರಿ ಯೋಜನೆ ಹಾಗೂ ಹೆಚ್.ಎನ್ ವ್ಯಾಲಿ ಏತ ನೀರಾವರಿ ಯೋಜನೆಯ ಮೂಲಕ ಬೆಂಗಳೂರು ನಗರದ ತ್ಯಾಜ್ಯ ನೀರನ್ನ ಎರಡನೇ ಹಂತದ ಸಂಸ್ಕರಣೆ ಮಾಡಿ ಕೆರೆಗಳಿಗೆ ಹರಿಸಲಾಗುತ್ತಿದೆ. ನೀರಿನ ಸಂಸ್ಕರಣೆಯ ಕಾರ್ಯವನ್ನು ಬೆಂಗಳೂರು ಜಲಮಂಡಳಿ ಮಾಡುತ್ತಿದೆ. ಸಣ್ಣ ನೀರಾವರಿ ಇಲಾಖೆ ಈ ಸಂಸ್ಕರಿಸಿದ ನೀರನ್ನ ಯೋಜನೆ ವ್ಯಾಪ್ತಿಯ ಕೆರೆಗಳಿಗೆ ಹರಿಸುವ ಕಾರ್ಯ ನಿರ್ವಹಿಸುತ್ತಿದೆ. ಈ ನೀರನ್ನ ಮೂರನೇ ಹಂತದಲ್ಲಿ ಸಂಸ್ಕರಿಸಬೇಕು ಎನ್ನುವುದು ಆ ಭಾಗದ ಜನರ ಹಾಗೂ ಜನಪ್ರತಿನಿಧಿಗಳ ಆಶಯವಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿಯ ಉಸ್ತುವಾರಿಗಳಾದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಯಲ್ಲಿ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜನಪ್ರತಿನಿಧಿಗಳ ಸಭೆಯನ್ನು ಆಯೋಜಿಸುವಂತೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಸಲಹೆ ನೀಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಣ್ಣ ನೀರಾವರಿ ಸಚಿವರು, ಸಭೆಯನ್ನು ಆಯೋಜಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಶಾಸಕರಾದ ಶರತ್ ಬಚ್ಚೇಗೌಡ, ಶ್ರೀನಿವಾಸ್, ಧೀರಜ್ ಮುನಿರಾಜು ಸೇರಿದಂತೆ ಇಲಾಖೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.