ಚಿತ್ರದುರ್ಗ: ತಾಲ್ಲೂಕಿನ ತಮಟಕಲ್ಲು ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಕಾರು ಮತ್ತು ಲಾರಿ ನಡುವೆ ಭಾನುವಾರ ಸಂಭವಿಸಿದ ಅಪಘಾತದಲ್ಲಿ ದಂಪತಿ ಮೃತಪಟ್ಟಿದ್ದಾರೆ.
ದಾವಣಗೆರೆಯ ಕರಿಬಸಪ್ಪ (60) ಮತ್ತು ಸಾವಿತ್ರಮ್ಮ (53) ಮೃತಪಟ್ಟವರು. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರಿಬಸಪ್ಪ ಭಾನುವಾರ ಸಂಜೆ ದಾವಣಗೆರೆಯಿಂದ ಬೆಂಗಳೂರಿನತ್ತ ಹೊರಟಿದ್ದರು. ಚಿತ್ರದುರ್ಗ ಹೊರವಲಯದ ತಮಟಕಲ್ಲು ಸಮೀಪದ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕರಿಬಸಪ್ಪ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸಾವಿತ್ರಮ್ಮ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.