ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹೆಚ್ಚು ಸೀಟು ಸಿಗುವುದು ಅನುಮಾನವಿದೆ. ಇದು ರಾಜ್ಯ ಸರ್ಕಾರದ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಈ ವಿಷಯ ಕಾಂಗ್ರೆಸ್ ಮುಖಂಡರಿಗೂ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸೀಟು ಗೆಲ್ಲಲ್ಲ ಎಂದು ಸಮೀಕ್ಷೆಗಳು ಹೇಳುತ್ತಿವೆ. ಇದು ಅವರಿಗೆ ಭಯ ಹುಟ್ಟಿಸಿದೆ. ಅದಕ್ಕಾಗಿ ಆಪರೇಷನ್ ಹಸ್ತ ಮಾಡುತ್ತಿದ್ದಾರೆ. ಆದರೆ, ಇದ್ಯಾವುದೂ ಯಶಸ್ವಿಯಾಗಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯದಲ್ಲಿ ಜೂನ್ ತಿಂಗಳಿನ ಕೊನೆಯ ವಾರದವರೆಗೂ ಮಳೆ ಬರಲಿಲ್ಲ. ಬಿತ್ತನೆ ಮಾಡಿದ್ದ ಬೆಳೆ ಸಂಪೂರ್ಣ ನಾಶವಾಗಿದೆ. ಜುಲೈನಲ್ಲಿ ಅಲ್ಪಸ್ವಲ್ಪ ಮಳೆಯಾಯಿತು. ಈಗ ಆಗಸ್ಟ್ನಲ್ಲಿ ಮತ್ತೆ ಮಳೆ ಬಂದಿಲ್ಲ. ರಾಜ್ಯ ಸರ್ಕಾರ ಕಾಲಹರಣ ಮಾಡದೆ ಕೂಡಲೇ ಬರಗಾಲ ತಾಲ್ಲೂಕುಗಳ ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಬೆಳೆ ಸಮೀಕ್ಷೆ ಮಾಡಿಸಿ, ಪರಿಹಾರ ಕೊಡುವ ಕೆಲಸ ಮಾಡಬೇಕು. ಕುಡಿಯುವ ನೀರಿನ ಕೊರತೆ ನೀಗಿಸಬೇಕು. ಈಗಾಗಲೇ ಕೇಂದ್ರ ಸರ್ಕಾರ ನೈಸರ್ಗಿಕ ವಿಪತ್ತು ಪರಿಹಾರದಡಿ ಒಂದು ಕಂತು ಪರಿಹಾರದ ಹಣ ಬಿಡುಗಡೆ ಮಾಡಿದೆ. ಜಿಲ್ಲಾಧಿಕಾರಿ ಖಾತೆಯಲ್ಲಿ ಹಣವಿದೆ. ಇದನ್ನು ರಾಜ್ಯ ಸರ್ಕಾರ ಬಳಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ಹೀಗಾಗಿ ಅನಧಿಕೃತವಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಕೊರತೆ ಇದೆ. ಇಷ್ಟೆಲ್ಲ ಆಗಿದ್ದರೂ ರಾಜ್ಯ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ವರ್ಗಾವಣೆ ದಂಧೆಯಲ್ಲಿ ತೊಡಗಿಕೊಂಡಿದೆ ಎಂದು ಟೀಕಿಸಿದರು.